ಅಳವಂಡಿ, ಏ.5: ಇಲ್ಲಿನ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿದ್ದ ಚಂದ್ರಶೇಖರ ದೊಡ್ಡಮನಿ (46) ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಂದ್ರಶೇಖರ ದೊಡ್ಡಮನಿ ಅವರು ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದವರು. ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಕಾಲೇಜಿನ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದರು.
ವಿದ್ಯಾರ್ಥಿಗಳೊಂದಿಗೆ ಆತ್ಮೀಯತೆ ಹಾಗೂ ಸಹೋದ್ಯೋಗಿಗಳೊಂದಿಗೆ ಸಹಕಾರದಿಂದ ಕೆಲಸ ಮಾಡುವ ಗುಣಗಳಿಂದ ಎಲ್ಲರ ಮನಗೆದ್ದಿದ್ದರು. ಅವರ ನಿಧನದಿಂದ ಶಿಕ್ಷಣ ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ ಎಂದು ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರಿಗೆ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ಭಾನುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
