ಗದಗ : ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ತಾಂಡಾದ ಹಿರಿಯರು, ಮಹಿಳೆಯರು ಹಾಗೂ ಸ್ಥಳೀಯ ಜನಸಾಮಾನ್ಯರು ಒಗ್ಗೂಡಿ ತೀವ್ರ ಪ್ರತಿಭಟನೆ ನಡೆಸಿದರು. ಗಣಿಗಾರಿಕೆ ಚಟುವಟಿಕೆಯಿಂದ ಪರಿಸರ ಹಾನಿಯಾಗುತ್ತಿದೆ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ಮನೆಗಳಿಗೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಮಹಲಿಂಗೇಶ ಹಿರೇಮಠ/ ಪರಮೇಶ ಲಮಾಣಿ. ಗದಗ
ಗ್ರಾಮದ ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಹಸಿರು ಸಂಪತ್ತು ನಾಶವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ನಿರಂತರ ಸ್ಫೋಟಕ ಬಳಕೆಯಿಂದ ತಾಂಡಾದ ಅನೇಕ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಜನರು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಹೇಳಿದರು.
ಇನ್ನೂ ಗಣಿಗಾರಿಕೆಯಲ್ಲಿ ಬಳಸಲಾಗುತ್ತಿರುವ ಟಿಪ್ಪರ್ ವಾಹನಗಳು ನಿರಂತರವಾಗಿ ಸಂಚರಿಸುತ್ತಿರುವ ಪರಿಣಾಮ ಧೂಳಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರು ಉಸಿರಾಟದ ತೊಂದರೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಮೇಲೆ ಇದರ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.

ಅಲ್ಲದೆ, ಅತಿಯಾದ ಗಣಿಗಾರಿಕೆಯಿಂದ ಭೂಮಿಯ ಆಳದ ಪದರಗಳಿಗೆ ಹಾನಿಯಾಗುತ್ತಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ ಎಂಬ ಆತಂಕವೂ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಭೀತಿ ಎದುರಾಗಿದೆ ಎಂದು ಹೇಳಿದರು.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸೂಕ್ತ ಅನುಮತಿ ಪಡೆದಿರುವರೇ ಅಥವಾ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿಗಳು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಜೊತೆಗೆ, ಸ್ಫೋಟಗಳಿಂದ ಮನೆಗಳಿಗೆ ಹಾನಿಯಾದ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ತಾಂಡಾದ ಹಿರಿಯರು ಹಾಗೂ ಸ್ಥಳೀಯ ಜನರು ಒಗ್ಗೂಡಿ ಕಾನೂನುಬದ್ಧ ಹೋರಾಟ ನಡೆಸಲು ನಿರ್ಧರಿಸಿದ್ದು, ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯ ಹಿನ್ನೆಲೆ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದ್ದು, ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ. ಇನ್ನಾದರೂ ಅಧಿಕಾರಿಗಳು ಸಮಸ್ಯೆಯತ್ತ ಗಮನ ಹರಿಸುತ್ತಾರಾ ಕಾದು ನೋಡಬೇಕಿದೆ.
