ಗದಗ, ಮೇ 12:
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ರಸ್ತೆಯ ಆದರ್ಶ ಶಾಲೆ ತಿರುವಿನ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರ ಬಿಹಾರ ಮೂಲದ ಸುಯೇಬ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಡಿಕ್ಕಿಯ ಹೊಡೆತಕ್ಕೆ ಬೈಕ್‌ನಿಂದ ರಸ್ತೆಗೆ ಬಿದ್ದ ಸುಯೇಬ್ ಅವರ ತಲೆಯ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿರುವ ಶಂಕೆ ವ್ಯಕ್ತವಾಗಿದ್ದು, ಪರಿಣಾಮ ತಲೆ ಸಂಪೂರ್ಣವಾಗಿ ಜಜ್ಜಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಸುಯೇಬ್ ಜೊತೆಯಲ್ಲಿದ್ದ ಹಿಂಬದಿ ಸವಾರ ನಿರಂಜನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೊಂದು ಬೈಕ್‌ನ ಸವಾರ ಹಾಗೂ ಹಿಂಬದಿ ಸವಾರನಿಗೂ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಸುಯೇಬ್ ಸೇರಿದಂತೆ ಗಾಯಾಳುಗಳು ಬಿಹಾರ ಮೂಲದ ಕಾರ್ಮಿಕರಾಗಿದ್ದು, ಸ್ಥಳೀಯ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ಮುಂಡರಗಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
