ಮುಂಡರಗಿ: ಸರ್ಕಾರಿ ಶಾಲೆಯಲ್ಲಿ ವಿತರಿಸಲಾಗಿದ್ದ ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಆತಂಕಗೊಂಡ ನೂರಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೀಡನಾಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ಬೀಡನಾಳ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಶಾಲಾ ಮಕ್ಕಳಿಗೆ ಬಿಸಿಯೂಟದ ಭಾಗವಾಗಿ ಉಪ್ಪಿಟ್ಟು ನೀಡಲಾಗಿತ್ತು. ಮಕ್ಕಳು ಉಪ್ಪಿಟ್ಟು ಸೇವಿಸಿದ ಬಳಿಕ ಅದರಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ ಎನ್ನಲಾಗಿದೆ.
ಶಾಲೆಯಲ್ಲಿದ್ದ ಬಹುತೇಕ ಮಕ್ಕಳು ಉಪ್ಪಿಟ್ಟು ಸೇವಿಸಿದ್ದರು ಎಂಬ ಮಾಹಿತಿ ತಿಳಿದುಬಂದಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ಹಾಗೂ ಶಾಲಾ ಆಡಳಿತ ಮಂಡಳಿಯವರು ಮಕ್ಕಳನ್ನು ತಕ್ಷಣವೇ ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ.
ನೂರಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ ಕರೆತಂದು ವೈದ್ಯರಿಂದ ತಪಾಸಣೆ ನಡೆಸಲಾಗಿದ್ದು, ಮಕ್ಕಳಿಗೆ ಅಗತ್ಯ ಪ್ರಾಥಮಿಕ ಚಿಕಿತ್ಸೆ ಹಾಗೂ ಆರೋಗ್ಯ ತಪಾಸಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಾಲ್ಕೈದು ಮಕ್ಕಳಿಗೆ ಮಾತ್ರ ವಾಂತಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಉಳಿದ ಮಕ್ಕಳು ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲದೆ ಇದ್ದಾರೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ತಾಲೂಕು ಶಿಕ್ಷಣಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಇಲಾಖೆಯ ಸಿಪಿಐ ಸೇರಿದಂತೆ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ವೈದ್ಯರು ಹಾಗೂ ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸಿದ್ದು, ಘಟನೆಗೆ ಕಾರಣವೇನು ಎಂಬುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಶಾಲೆಯಲ್ಲಿ ತಯಾರಿಸಲಾದ ಬಿಸಿಯೂಟದ ಗುಣಮಟ್ಟ, ಆಹಾರ ತಯಾರಿಕೆ ಹಾಗೂ ವಿತರಣಾ ವ್ಯವಸ್ಥೆಯ ಬಗ್ಗೆಯೂ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
ಘಟನೆಯಿಂದ ಕೆಲಕಾಲ ಪೋಷಕರು ಆತಂಕಕ್ಕೊಳಗಾದರೂ, ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಂಡುಬಾರದ ಹಿನ್ನೆಲೆಯಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಮಕ್ಕಳಿಗೆ ನೀಡುವ ಬಿಸಿಯೂಟದ ತಯಾರಿಕೆ ಹಾಗೂ ವಿತರಣೆಯಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸುವಂತೆ ಪೋಷಕರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
