Home » News » ಸೆ.1ರಂದು ಗದಗ ಜಿಲ್ಲೆಗೆ ಸಿಎಂ ಡಿ.ಕೆ. ಶಿವಕುಮಾರ ಭೇಟಿ..:ಬರ ಪರಿಸ್ಥಿತಿ ಅವಲೋಕನ; ಲಕ್ಷ್ಮೇಶ್ವರಕ್ಕೂ ಭೇಟಿ..

ಸೆ.1ರಂದು ಗದಗ ಜಿಲ್ಲೆಗೆ ಸಿಎಂ ಡಿ.ಕೆ. ಶಿವಕುಮಾರ ಭೇಟಿ..:ಬರ ಪರಿಸ್ಥಿತಿ ಅವಲೋಕನ; ಲಕ್ಷ್ಮೇಶ್ವರಕ್ಕೂ ಭೇಟಿ..

by CityXPress
0 comments

ಗದಗ, ಆ.29: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಲಿದ್ದು, ಜಿಲ್ಲೆಯ ಬರ ಪರಿಸ್ಥಿತಿ, ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಮಹತ್ವದ ಅವಲೋಕನ ಸಭೆ ನಡೆಸಲಿದ್ದಾರೆ.

ವರದಿ: ಮಹಲಿಂಗೇಶ ಹಿರೇಮಠ.ಗದಗ

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸವನ್ನು ಯಶಸ್ವಿಯಾಗಿ ಹಾಗೂ ಯಾವುದೇ ಲೋಪವಾಗದಂತೆ ನಡೆಸಲು ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.

ಮುಖ್ಯಮಂತ್ರಿಗಳು ಸೆ.1ರಂದು ಹುಬ್ಬಳ್ಳಿಯಿಂದ ಗದಗಕ್ಕೆ ಆಗಮಿಸಿ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಅವಲೋಕನ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದು, ನಂತರ ಲಕ್ಷ್ಮೇಶ್ವರಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸದ ಪ್ರತಿಯೊಂದು ಕಾರ್ಯಕ್ರಮವನ್ನು ಸಮನ್ವಯದಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

banner

ಸಮಗ್ರ ಮಾಹಿತಿ ಸಿದ್ಧಪಡಿಸಿಕೊಳ್ಳಲು ಸೂಚನೆ

ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಸಭೆ ಮಹತ್ವದ್ದಾಗಿರುವುದರಿಂದ ಜಿಲ್ಲೆಯ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳು, ಅಂಕಿ-ಅಂಶಗಳು ಹಾಗೂ ಸಮಗ್ರ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ, ಬೆಳೆ ಹಾನಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆ, ಬರ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನಿಖರ ಮಾಹಿತಿಯನ್ನು ಅಧಿಕಾರಿಗಳು ಸಿದ್ಧಪಡಿಸಿಕೊಳ್ಳಬೇಕು. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಪೂರ್ಣವಾಗದಂತೆ ಮುಂಚಿತವಾಗಿಯೇ ಪರಿಶೀಲಿಸಿಕೊಂಡು ಸಭೆಗೆ ಹಾಜರಾಗುವಂತೆ ಅವರು ನಿರ್ದೇಶನ ನೀಡಿದರು.

ಪ್ರಸ್ತುತ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತ ಮಾಹಿತಿಯನ್ನೂ ಅಧಿಕಾರಿಗಳು ಸಿದ್ಧಪಡಿಸಿಕೊಳ್ಳಬೇಕು. ಬೆಳೆ ಹಾನಿ, ರೈತರಿಗೆ ಲಭ್ಯವಾಗಿರುವ ಪರಿಹಾರ ಹಾಗೂ ಸರ್ಕಾರದಿಂದ ಕೈಗೊಂಡಿರುವ ಕ್ರಮಗಳ ಕುರಿತು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಲಾಯಿತು.

ಜನಸ್ಪಂದನ ಕಾರ್ಯಕ್ರಮಗಳ ಮಾಹಿತಿಗೂ ಆದ್ಯತೆ

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳು, ಪ್ರಜಾ ಸೇವೆ ಹಾಗೂ ಪ್ರತಿ ಶನಿವಾರ ನಡೆಯುವ ಜನಸ್ಪಂದನ ಸಭೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಹ ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜನರಿಂದ ಸ್ವೀಕರಿಸಲಾದ ಅಹವಾಲುಗಳು, ಅವುಗಳ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಬಾಕಿ ಇರುವ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸಿದ್ಧರಾಗಿರಬೇಕು ಎಂದು ಹೇಳಿದರು.

ಶಿಷ್ಟಾಚಾರ, ಭದ್ರತೆ ಹಾಗೂ ಸಂಚಾರಕ್ಕೆ ಆದ್ಯತೆ

ಮುಖ್ಯಮಂತ್ರಿಗಳ ಪ್ರವಾಸದ ಸಂದರ್ಭದಲ್ಲಿ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಖ್ಯಮಂತ್ರಿಗಳು ಜಿಲ್ಲೆಯ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ತೆರಳುವವರೆಗೆ ಯಾವುದೇ ರೀತಿಯ ಗೊಂದಲ ಅಥವಾ ಸಂಚಾರ ವ್ಯತ್ಯಯ ಉಂಟಾಗದಂತೆ ಸಂಬಂಧಿಸಿದ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮುಖ್ಯಮಂತ್ರಿಗಳ ಸಂಚಾರ ಮಾರ್ಗ, ಕಾರ್ಯಕ್ರಮ ನಡೆಯುವ ಸ್ಥಳಗಳು ಹಾಗೂ ಸಾರ್ವಜನಿಕರ ಓಡಾಟದ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಪರಿಶೀಲಿಸಿ, ಯಾವುದೇ ರೀತಿಯ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಶಿಷ್ಟಾಚಾರ ಹಾಗೂ ಭದ್ರತಾ ವ್ಯವಸ್ಥೆಗೆ ಪ್ರಮುಖ ಆದ್ಯತೆ ನೀಡಲಾಗುವುದು. ಮುಖ್ಯಮಂತ್ರಿಗಳ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಸಾರ್ವಜನಿಕರ ಸಂಚಾರಕ್ಕೂ ಹೆಚ್ಚಿನ ವ್ಯತ್ಯಯ ಉಂಟಾಗದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಪ್ರವಾಸದ ಮಾರ್ಗ, ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ವಿವಿಧ ಹಂತಗಳಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಪೊಲೀಸ್ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ

ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್. ಅವರು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಗೆ ವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಸಿದ್ಧತೆ, ಶಿಷ್ಟಾಚಾರ, ಅಧಿಕಾರಿಗಳ ಹಾಜರಾತಿ, ಅಗತ್ಯ ದಾಖಲೆಗಳ ಸಿದ್ಧತೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಪ್ರವಾಸದ ವೇಳೆ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್‌ಆರ್ ಜಿ.ಜೆ. ರುದ್ರಣ್ಣಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ, ಡಿಡಿಪಿಐ ಆರ್.ಎಸ್. ಬುರಡಿ, ಆರ್‌ಟಿಓ ವಿಶಾಲ್, ರಾಜಾರಾಮ್ ಪವರ್, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶರಣು ಗೊಗೇರಿ, ಡಾ. ಎಚ್.ಬಿ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb