Home » News » ಗೌರಿ-ಗಣೇಶ ಹಬ್ಬ:ಡಿಜೆ ಪ್ರಿಯರಿಗೆ ಎಸ್ಪಿ ಮಿಥುನ್‌ರಿಂದ ಸಿಹಿಸುದ್ದಿ! ಆದರೆ ಒಂದು ಕಂಡಿಷನ್…!?

ಗೌರಿ-ಗಣೇಶ ಹಬ್ಬ:ಡಿಜೆ ಪ್ರಿಯರಿಗೆ ಎಸ್ಪಿ ಮಿಥುನ್‌ರಿಂದ ಸಿಹಿಸುದ್ದಿ! ಆದರೆ ಒಂದು ಕಂಡಿಷನ್…!?

by CityXPress
0 comments

ಗದಗ: ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ, ಸುಪ್ರೀಂ ಕೋರ್ಟ್ ಆದೇಶ ಹಾಗೂ ನಿಯಮಗಳ ಅನ್ವಯ 75 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದಕ್ಕೆ ಅವಕಾಶವಿಲ್ಲ. ಈ ನಿಯಮ ಡಿಜೆ ಸೌಂಡ್‌ಗೂ ಅನ್ವಯವಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಸ್ಪಷ್ಟಪಡಿಸಿದರು.

ವರದಿ: ಮಹಲಿಂಗೇಶ ಹಿರೇಮಠ.ಗದಗ

ನಗರದಲ್ಲಿ ಪ್ರತಿ ವರ್ಷ ಗೌರಿ-ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಪ್ರಸಕ್ತ ವರ್ಷವೂ ಸಂಪ್ರದಾಯದಂತೆ ಹಬ್ಬ ಆಚರಿಸಲು ಅವಕಾಶವಿದೆ. ಡಿಜೆ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿಲ್ಲ. ಆದರೆ, ನಿಗದಿತ ಶಬ್ದಮಿತಿಯನ್ನು ಮೀರುವಂತಿಲ್ಲ ಎಂದು ಅವರು ಯುವಕರಿಗೆ ತಿಳಿಸಿದರು.

ಈ ಕುರಿತು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗದಗ ಜಿಲ್ಲೆಯಾದ್ಯಂತ 2,000ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ನಡೆಯುವ ನಿರೀಕ್ಷೆಯಿದ್ದು, ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

banner

ಹೆಚ್ಚುವರಿಯಾಗಿ ಮೂರು ಕೆಎಸ್‌ಆರ್‌ಪಿ ತುಕಡಿ, 450ಕ್ಕೂ ಹೆಚ್ಚು ಹೋಮ್‌ಗಾರ್ಡ್ ಸಿಬ್ಬಂದಿ, ನಾಲ್ಕು ಡಿವೈಎಸ್‌ಪಿ ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಬಂದೋಬಸ್ತ್ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. 30ಕ್ಕೂ ಹೆಚ್ಚು ವಾಹನಗಳನ್ನು ಸಹ ಬಳಸಿಕೊಳ್ಳಲಾಗುವುದು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತೊಂದರೆಯಾಗದಂತೆ ‘ಏಕಗವಾಕ್ಷಿ’ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ 150ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಲಾಗಿದೆ. ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಲಾಗಿದ್ದು, ಗಣೇಶ ಪ್ರತಿಷ್ಠಾಪನೆಗೂ ಮುನ್ನ ಹೋಬಳಿ, ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದೆ ಎಂದರು.

ಜಿಲ್ಲೆಯಲ್ಲಿ 135 ಪುಂಡರನ್ನು ಗುರುತಿಸಿ, ಅವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ಲೆಕ್ಸ್, ಬ್ಯಾನರ್, ಪ್ರಿಂಟರ್ಸ್ ಹಾಗೂ ಸೌಂಡ್ ಸಿಸ್ಟಮ್ ಮಾಲೀಕರ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಲಾಗಿದೆ ಎಂದು ಎಸ್‌ಪಿ ತಿಳಿಸಿದರು.

ಪಿಕ್‌ಪಾಕೆಟ್ ತಡೆ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡುವ ಕುರಿತು ಕ್ರಮ ಜರುಗಿಸಲಾಗುವುದು ಎಂದರು.

300ಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶ ಗುರುತು

ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ 300ಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಕಳೆದ ವರ್ಷ 120 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸೂಕ್ಷ್ಮ ಪ್ರದೇಶಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ಮಿಥುನ್ ಎಚ್.ಎನ್. ಹೇಳಿದರು.

ಕಾನೂನು ಮತ್ತು ನಿಯಮಗಳನ್ನು ಪಾಲಿಸಿ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb