ಗದಗ, ಆ. 4: ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ ಅವರಿಗೆ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನಪ್ರತಿನಿಧಿಗಳ ಆಕ್ರೋಶ ಭುಗಿಲೆದ್ದಿದೆ. ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಮಂಗಳವಾರ ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ವರದಿ: ಮಹಲಿಂಗೇಶ ಹಿರೇಮಠ. ಗದಗ
ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೆಲಕಾಲ ವಾಹನ ಸಂಚಾರವನ್ನು ತಡೆದು ಸರ್ಕಾರದ ಗಮನ ಸೆಳೆಯಲು ಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಾಂಗ್ರೆಸ್ ಹಿರಿಯ ಮುಖಂಡರಾದ ಬಿ.ಕೆ. ಹರಿಪ್ರಸಾದ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೆಚ್.ಕೆ. ಪಾಟೀಲ ಅವರು ಹಲವು ದಶಕಗಳಿಂದ ಪಕ್ಷದ ಸಂಘಟನೆ ಹಾಗೂ ಆಡಳಿತದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ಹಿರಿಯ ನಾಯಕನನ್ನು ಸಚಿವ ಸಂಪುಟದಿಂದ ಹೊರಗಿಡುವುದು ಗದಗ ಜಿಲ್ಲೆಗೆ ಮಾತ್ರವಲ್ಲ, ಇಡೀ ಉತ್ತರ ಕರ್ನಾಟಕ ಭಾಗಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದೇ ವೇಳೆ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಪಕ್ಷದ 22 ಸದಸ್ಯರು ಸಾಮೂಹಿಕ ರಾಜೀನಾಮೆ ಘೋಷಿಸುವ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸದಸ್ಯರು, ಹೆಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ನಾವೆಲ್ಲ ರಾಜೀನಾಮೆ ಸಲ್ಲಿಸುತ್ತಿದ್ದೇವೆ. ಸರ್ಕಾರ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ಭಾಗಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದು ಪ್ರಾದೇಶಿಕ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಆರೋಪಿಸಿದರು. ಪಕ್ಷಕ್ಕಾಗಿ ದೀರ್ಘಕಾಲ ದುಡಿದ ಹಿರಿಯ ನಾಯಕರನ್ನು ಕಡೆಗಣಿಸಿರುವುದು ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ ಎಂದು ಸದಸ್ಯರು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸದಸ್ಯರು, ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಹೆಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ವೇಳೆ ಕೆಲ ಸದಸ್ಯರು ಉತ್ತರ ಕರ್ನಾಟಕ ಭಾಗದ ನಿರಂತರ ಕಡೆಗಣನೆಯನ್ನು ಉಲ್ಲೇಖಿಸಿ ಪ್ರತ್ಯೇಕ ಉತ್ತರ ಕರ್ನಾಟಕದ ಬೇಡಿಕೆಯನ್ನು ಸಹ ಮುಂದಿಟ್ಟರು. ಈ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕೆಂದು ಆಗ್ರಹಿಸಿದರು.
ಹೆಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ದೊರಕದಿರುವ ವಿಚಾರ ಇದೀಗ ಗದಗ ಜಿಲ್ಲೆಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

