ಗದಗ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಶಿಕ್ಷಣ ಸಂಸ್ಥೆಯ ಬಿಪಿನ್ ಚಿಕ್ಕಟ್ಟಿ ಶಾಲೆಯಲ್ಲಿ ಆ.11ರಿಂದ ಆ.14 ರವರೆಗೆ ‘ಕ್ರಾಂತಿ ದಿನಗಳು’ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಮೊದಲ ದಿನವಾದ ಆ.11ರಂದು ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಎಂಬ ವಿಶಿಷ್ಟ ಪರಿಕಲ್ಪನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಅಣುಕು ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ವಿವಿಧ ವಿಧಾನಗಳನ್ನು ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.
‘ಸ್ವಚ್ಛ ಭಾರತ ಎಂದರೆ ಸ್ವಸ್ಥ ಭಾರತ’ ಎಂಬ ಸಂದೇಶವನ್ನು ಸಾರುವ ಮೂಲಕ ಸ್ವಚ್ಛ ಪರಿಸರ ಹಾಗೂ ಆರೋಗ್ಯಕರ ಜೀವನದ ನಡುವಿನ ಸಂಬಂಧವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಇದೇ ಸಂದರ್ಭದಲ್ಲಿ ಪರಿಸರ ಮಾಲಿನ್ಯ, ಜಲ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಮಾಲಿನ್ಯ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ವಿವಿಧ ಕ್ರಮಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯ ಕುರಿತು ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಅಣುಕು ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಶಾಲೆಯ ಎಲ್ಲ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತೆ, ಪರಿಸರ ಸಂರಕ್ಷಣೆ ಮತ್ತು ಜವಾಬ್ದಾರಿಯುತ ನಾಗರಿಕತ್ವದ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಕಾರ್ಯಕ್ರಮದ ಸಂದೇಶವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಾರಿದರು.
‘ಕ್ರಾಂತಿ ದಿನಗಳು’ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯೋತ್ಸವವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಾಮಾಜಿಕ ಹೊಣೆಗಾರಿಕೆ, ಸ್ವಚ್ಛತೆ, ಪರಿಸರ ಕಾಳಜಿ ಹಾಗೂ ಜಾಗೃತ ನಾಗರಿಕತ್ವದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವ ಪ್ರಯತ್ನ ನಡೆಯುತ್ತಿದೆ.
