ಶಿರಹಟ್ಟಿ, ಜು. 20: ಇತ್ತೀಚಿನ ದಿನಗಳಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ರಾಜಕೀಯದಲ್ಲಿ ಒಂದರ ಹಿಂದೆ ಒಂದರಂತೆ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಮಂಜುನಾಥ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿರುವುದು ಕ್ಷೇತ್ರದ ಬಿಜೆಪಿ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಗೆ ಕಾರಣವಾಗಿದೆ.
ಶಿರಹಟ್ಟಿ ಮಂಡಲ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸುನೀಲ ಜಿ. ಮಹಾಂತಶೆಟ್ಟರ ಅವರು ಸೋಮವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಜುಲೈ 9ರಂದು ನಡೆದ ಶಿರಹಟ್ಟಿ ಮಂಡಲ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ಎಲ್ಲಾ ಸದಸ್ಯರು ಒಮ್ಮತದಿಂದ ಕೈಗೊಂಡ ನಿರ್ಣಯದಂತೆ ಮಂಜುನಾಥ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಇಬ್ಬರೂ ಭಾರತೀಯ ಜನತಾ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು, ಪಕ್ಷದ ಶಾಸಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುತ್ತ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಿದರು.
ಅಲ್ಲದೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ವಿರುದ್ಧವೂ ಹಗುರವಾಗಿ ಮಾತನಾಡುತ್ತ ಬಂದಿದ್ದು, ಇದರಿಂದ ಕ್ಷೇತ್ರದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ, ಕಾರ್ಯಕರ್ತರಲ್ಲಿ ಇರುಸು-ಮುರುಸು ಉಂಟಾಗಿತ್ತು. ಇದರ ಪರಿಣಾಮವಾಗಿ ಪಕ್ಷ ಸಂಘಟನೆಗೂ ಹಿನ್ನಡೆಯಾಗಿದೆ ಎಂದು ಹೇಳಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಕೆಲಸ ಮಾಡದೆ, ಪಕ್ಷೇತರ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆಯ ನಂತರವೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಾನಿಯಾಗುವ ರೀತಿಯ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಿದರು.
ಈ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ಶಿರಹಟ್ಟಿ ಮಂಡಲ ಬಿಜೆಪಿ ಕೋರ್ ಕಮಿಟಿಯು ಒಮ್ಮತದ ನಿರ್ಣಯದ ಮೂಲಕ ಮಂಜುನಾಥ ಮಾಗಡಿ ಹಾಗೂ ಹೊನ್ನಪ್ಪ ವಡ್ಡರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿದೆ ಎಂದು ಸುನೀಲ ಜಿ. ಮಹಾಂತಶೆಟ್ಟರ ಸ್ಪಷ್ಟಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಶಿರಹಟ್ಟಿ ಕ್ಷೇತ್ರದ ಬಿಜೆಪಿ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಈ ಕ್ರಮಕ್ಕೆ ವಿಶೇಷ ರಾಜಕೀಯ ಮಹತ್ವ ದೊರೆತಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ರಾಜಕೀಯ ಬೆಳವಣಿಗೆಗಳು ಯಾವ ತಿರುವು ಪಡೆಯಲಿವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
