ಗದಗ, ಜು.29: ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕೆರೆ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರೋಣ ಕಡೆಯಿಂದ ಗಜೇಂದ್ರಗಡದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ರೋಣ ಪಟ್ಟಣದ ಕಡೆಗೆ ಬರುತ್ತಿದ್ದ ಕಾರು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರರಾದ ಆಶೀಪ್ ನಧಾಪ್ (35) ಹಾಗೂ ಇಬ್ರಾಹಿಂಸಾಬ ಗೋನಾಳ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಹುಸೇನಸಾಬ ಗೋನಾಳ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರೋಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

