ಗದಗ ಹೊಸ ಬಸ್ ನಿಲ್ದಾಣದ ಬಳಿ ದುರ್ಘಟನೆ – ಕೆಲಕಾಲ ಟ್ರಾಫಿಕ್ ಜಾಮ್
ಗದಗ, ಜೂನ್ 8: ನಗರದ ಹೊಸ ಬಸ್ ನಿಲ್ದಾಣದಿಂದ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಡೆಗೆ ತೆರಳುವ ಮುಖ್ಯ ರಸ್ತೆಯಲ್ಲಿ ಸೋಮವಾರ (ಇಂದು ಸಂಜೆ) ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಪಾದಚಾರಿ ಅಪಘಾತದಿಂದ ಕ್ಷಣಮಾತ್ರದಲ್ಲೇ ಪಾರಾಗಿರುವ ಘಟನೆ ನಡೆದಿದೆ.
ವರದಿ:ಮಹಲಿಂಗೇಶ ಹಿರೇಮಠ. ಗದಗ
ಗಜೇಂದ್ರಗಡ ಸಾರಿಗೆ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಹೊಸ ಬಸ್ ನಿಲ್ದಾಣದಿಂದ ಗಜೇಂದ್ರಗಡದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಇಬ್ಬರು ಪಾದಚಾರಿಗಳಲ್ಲಿ ಓರ್ವನಿಗೆ ಬಸ್ ಡಿಕ್ಕಿ ಹೊಡೆದಿದ್ದು,ಮತ್ತೋರ್ವ ಪಾದಚಾರಿ ಕ್ಷಣಮಾತ್ರದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮಾಹಿತಿ ತಿಳಿದುಬಂದಿದೆ. ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿದ ಪರಿಣಾಮ ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡು, ತೀವ್ರ ರಕ್ತಸ್ರಾವದಿಂದ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಅಪಘಾತ ಸ್ಥಳಕ್ಕೆ ಧಾವಿಸಿದರು. ಅಪಘಾತದ ನಂತರ ರಸ್ತೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿ, ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಅಪಘಾತದ ಪರಿಣಾಮವಾಗಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಮತ್ತು ವಿಳಾಸದ ಕುರಿತು ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ಮಾಹಿತಿ ಕಲೆಹಾಕಲು ಹಾಗೂ ಕುಟುಂಬಸ್ಥರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ನಡೆಸಿದ್ದು, ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
