ಗದಗ: ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಅಧ್ಯಕ್ಷತೆಯಲ್ಲಿ ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದಿನಿಂದ ಎರೆಡು ದಿನಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಆರಂಭಗೊಂಡಿದ್ದು, ಮೊದಲ ದಿನವೇ ಕೆಲವು ಇಲಾಖೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದಿರುವುದಕ್ಕೆ ಸಚಿವರು ಬೇಸರ ವ್ಯಕ್ತಪಡಿಸಿದರು. ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಅವರು ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದು, ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಚರ್ಚೆ ನಡೆಸಿದರು.
ವರದಿ: ಮಹಲಿಂಗೇಶ ಹಿರೇಮಠ. ಗದಗ
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಮೊದಲ ಹಂತದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಹಾಗೂ ಕರ್ನಾಟಕ ಬೀಜ ನಿಗಮದ ಪ್ರಗತಿ ಪರಿಶೀಲನೆ ನಡೆಸಲಾಯಿತು. ಆಯಾ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳು, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಹಾಗೂ ಇಲಾಖೆಗಳ ಪ್ರಗತಿಯ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ರೇಷ್ಮೆ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸಗೌಡ ಹಾಗೂ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಹುಲಗಣ್ಣವರಿಗೆ ಸಮರ್ಪಕ ಮತ್ತು ಸಂಪೂರ್ಣ ಮಾಹಿತಿ ಒದಗಿಸದಿರುವುದಕ್ಕೆ ಸಚಿವ ಬಸವರಾಜ ರಾಯರಡ್ಡಿ ಬೇಸರ ವ್ಯಕ್ತಪಡಿಸಿದರು. ಇಲಾಖೆಗಳ ಪ್ರಗತಿ, ಯೋಜನೆಗಳ ಅನುಷ್ಠಾನ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡುವಲ್ಲಿ ಅಧಿಕಾರಿಗಳು ನಿರಾಸಕ್ತಿ ತೋರಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಎರಡೂ ಇಲಾಖೆಗಳ ಉಪನಿರ್ದೇಶಕರಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಮುಕುಲ್ ಜೈನ್ ಅವರಿಗೆ ಸೂಚನೆ ನೀಡಿದರು.
ಪ್ರಗತಿ ಪರಿಶೀಲನಾ ಸಭೆ ಎಂದರೆ ಇಲಾಖೆಯಲ್ಲಿರುವ ಮಾಹಿತಿಯನ್ನು ಮಾತ್ರ ಸಂಗ್ರಹಿಸಿ ತಂದು ಮಂಡಿಸುವುದಲ್ಲ. ಬದಲಾಗಿ ಇಲಾಖೆಯ ನೈಜ ಪ್ರಗತಿ, ಸರ್ಕಾರದ ಯೋಜನೆಗಳ ಅನುಷ್ಠಾನದ ಹಂತ, ಫಲಾನುಭವಿಗಳಿಗೆ ದೊರೆತಿರುವ ಸೌಲಭ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂಬ ಆಶಯವನ್ನು ಸಚಿವರು ಅಧಿಕಾರಿಗಳ ಮುಂದೆ ವ್ಯಕ್ತಪಡಿಸಿದರು.
“ಅಧಿಕಾರಿಗಳು ರಿವ್ಯೂ ಮೀಟಿಂಗ್ ಅಂದರೆ ಇಲಾಖೆಯಲ್ಲಿ ಏನಿದೆಯೋ ಅದನ್ನಷ್ಟೇ ಸ್ವಲ್ಪ ಮಾಡಿ ಮಾಹಿತಿ ಕೊಡುತ್ತಿದ್ದೀರಿ” ಎಂದು ಅಧಿಕಾರಿಗಳ ಕಾರ್ಯವೈಖರಿ ಕುರಿತು ಬೇಸರ ವ್ಯಕ್ತಪಡಿಸಿದರು. ಸಭೆಗೆ ಬರುವಾಗ ಅಗತ್ಯ ಮಾಹಿತಿಯೊಂದಿಗೆ ಪೂರ್ವಸಿದ್ಧತೆ ಮಾಡಿಕೊಂಡು ಬರಬೇಕು. ಇಲಾಖೆಗಳಲ್ಲಿನ ಪ್ರಗತಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಸಮಗ್ರ ವಿವರಗಳನ್ನು ನೀಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂಬುದನ್ನು ಸ್ಪಷ್ಟಪಡಿಸಿದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪ್ರತಿಯೊಂದು ಇಲಾಖೆಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕೇವಲ ಪ್ರಗತಿಯ ಅಂಕಿ-ಅಂಶಗಳನ್ನು ನೀಡುವುದಕ್ಕಿಂತ, ಯೋಜನೆಗಳು ಜನರಿಗೆ ತಲುಪಿವೆಯೇ, ಅನುಷ್ಠಾನದಲ್ಲಿ ಎದುರಾಗಿರುವ ಸಮಸ್ಯೆಗಳೇನು ಹಾಗೂ ಅವುಗಳ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳೇನು ಎಂಬುದರ ಕುರಿತು ಅಧಿಕಾರಿಗಳು ಸ್ಪಷ್ಟ ಮಾಹಿತಿ ಹೊಂದಿರಬೇಕು ಎಂಬ ನಿಟ್ಟಿನಲ್ಲಿ ಸಚಿವರು ಗಮನ ಸೆಳೆದರು.
ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ನಡೆದ ಮೊದಲ ಪ್ರಗತಿ ಪರಿಶೀಲನಾ ಸಭೆಯಲ್ಲಿಯೇ ಅಧಿಕಾರಿಗಳಿಂದ ಸಮಗ್ರ ಮಾಹಿತಿ ನಿರೀಕ್ಷಿಸಿದ ಸಚಿವರು, ಮಾಹಿತಿ ಕೊರತೆ ಹಾಗೂ ಸಭೆಯ ಪೂರ್ವಸಿದ್ಧತೆಯ ಲೋಪದ ಬಗ್ಗೆ ಬೇಸರ ವ್ಯಕ್ತಪಡಿಸಿರುವುದು ಗಮನ ಸೆಳೆಯಿತು. ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಕುರಿತು ಮುಂದಿನ ಹಂತದಲ್ಲಿಯೂ ಪರಿಶೀಲನೆ ನಡೆಯಲಿದೆ.
