ಹುಬ್ಬಳ್ಳಿ: ಹುಬ್ಬಳ್ಳಿ ಕೇಂದ್ರ ಕಚೇರಿ ಹೊಂದಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ)ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎನ್. ಹೇಮಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈವರೆಗೆ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೈಶಾಲಿ ಎಂ.ಎಲ್. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್. ಹೇಮಂತ್ ಅವರನ್ನು ನೇಮಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ವೈಶಾಲಿ ಎಂ.ಎಲ್. ಅವರು ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಎಂ.ಎಲ್. ವೈಶಾಲಿ ಅವರನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸರ್ಕಾರ ಆದೇಶ ಹೊರಡಿಸಿದ್ದು ಹೆಚ್ಚುವರಿ ಪ್ರಭಾರಿ ಜವಾಬ್ದಾರಿಯ ಅಧಿಕಾರ ವಹಿಸಿಕೊಂಡಿದ್ದಾರೆ.
ನೂತನವಾಗಿ ನೇಮಕಗೊಂಡಿರುವ ಎನ್. ಹೇಮಂತ್ ಅವರು ಈ ಹಿಂದೆ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರನ್ನು ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೆಸ್ಕಾಂ ವ್ಯಾಪ್ತಿಯ ವಿದ್ಯುತ್ ಪೂರೈಕೆ, ನಿರ್ವಹಣೆ, ಗ್ರಾಹಕರ ಸಮಸ್ಯೆಗಳ ಪರಿಹಾರ ಸೇರಿದಂತೆ ಹಲವು ಪ್ರಮುಖ ಜವಾಬ್ದಾರಿಗಳನ್ನು ನೂತನ ವ್ಯವಸ್ಥಾಪಕ ನಿರ್ದೇಶಕರು ನಿರ್ವಹಿಸಲಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಎನ್. ಹೇಮಂತ್ ಅವರು ಶೀಘ್ರದಲ್ಲೇ ಹೆಸ್ಕಾಂನ ಎಂ.ಡಿ. ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
