ಗದಗ/ದಾವಣಗೆರೆ:
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಠದ ವಸತಿ ನಿಲಯದಲ್ಲಿದ್ದ ಬಾಲಕನ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮೊದಲಿಗೆ ‘0 FIR’ ದಾಖಲಿಸಲಾಗಿತ್ತು. ಘಟನೆ ನಡೆದ ಸ್ಥಳ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಸೇರಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಅಲ್ಲಿನ ವರ್ಗಾಯಿಸಲಾಗಿದೆ.

ದೂರಿನಲ್ಲಿ, ಮಠದ ವಸತಿ ನಿಲಯದಲ್ಲಿ ವಾಸವಾಗಿದ್ದ ತನ್ನ ಮಗನನ್ನು ವಚನಾನಂದ ಶ್ರೀ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದರು ಎಂದು ಬಾಲಕನ ತಾಯಿ ಆರೋಪಿಸಿದ್ದಾರೆ. ವಿಶೇಷವಾಗಿ, ಬಾಲಕನಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಹಾಗೂ ಅನುಚಿತವಾಗಿ ವರ್ತಿಸುತ್ತಿದ್ದರು ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.
ಪೊಲೀಸರು ಈಗ ಬಾಲಕ ಮತ್ತು ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಠದಲ್ಲಿ ವಾಸವಾಗಿದ್ದ ಇತರ ವಿದ್ಯಾರ್ಥಿಗಳನ್ನೂ ಸಂಪರ್ಕಿಸಿ ಮಾಹಿತಿ ಕಲೆಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವಚನಾನಂದ ಶ್ರೀ ವಿರುದ್ಧ ಈಗಾಗಲೇ ಕೆಲವು ವಿವಾದಗಳು ಕೇಳಿಬಂದಿದ್ದ ಹಿನ್ನೆಲೆ, ಈ ಹೊಸ ಪ್ರಕರಣ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. “ಮಕ್ಕಳನ್ನು ಮಸಾಜ್‌ಗಾಗಿ ಬಳಸಿಕೊಳ್ಳಲಾಗುತ್ತಿತ್ತೇ? ಅಥವಾ ದೈಹಿಕ ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿತ್ತೇ?” ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣ ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವುದರಿಂದ ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸಲಾಗುತ್ತಿದೆ. ಬಾಲಕರ ಸುರಕ್ಷತೆ ಮತ್ತು ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಸಂಬಂಧಿತ ಅಧಿಕಾರಿಗಳ ಸಹಕಾರವೂ ಪಡೆಯುವ ಸಾಧ್ಯತೆ ಇದೆ.
ಘಟನೆ ಬೆಳಕಿಗೆ ಬಂದ ಬಳಿಕ ಪಂಚಮಸಾಲಿ ಸಮುದಾಯದೊಳಗೂ ಚರ್ಚೆ ಶುರುವಾಗಿದೆ. ಕೆಲವು ಮುಖಂಡರು ಪ್ರಕರಣದ ಸತ್ಯಾಸತ್ಯತೆ ಬಹಿರಂಗವಾಗಬೇಕು ಎಂದು ಒತ್ತಾಯಿಸುತ್ತಿದ್ದರೆ, ಇನ್ನೂ ಕೆಲವರು ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರು ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
