ಗದಗ: ಗದಗ ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹಿರಿಯ ಶಾಸಕ ಡಾ. ಎಚ್.ಕೆ. ಪಾಟೀಲ ಅವರು ಘೋಷಿಸಿದ ಬೆನ್ನಲ್ಲೇ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಪತ್ರ ಬರೆದಿರುವುದು ರಾಜಕೀಯವಾಗಿ ಹಾಗೂ ಜಿಲ್ಲೆಯ ರೈತರ ವಲಯದಲ್ಲಿ ಗಮನ ಸೆಳೆದಿದೆ.
ವರದಿ: ಮಹಲಿಂಗೇಶ ಹಿರೇಮಠ. ಗದಗ
ಗದಗ ಜಿಲ್ಲೆಯ ಗದಗ, ರೋಣ ಹಾಗೂ ಮುಂಡರಗಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಸಚಿವ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಮಳೆ ಕೊರತೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಪರಿಗಣಿಸಿ, ಬರಪೀಡಿತ ತಾಲೂಕುಗಳೆಂದು ಘೋಷಿಸಿ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಭಾನುವಾರ ಮುಳಗುಂದದಲ್ಲಿ ಬರ ಘೋಷಣೆಗೆ ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಮುಳಗುಂದದ ಬಸಾಪುರ ಕ್ರಾಸ್ ಬಳಿ ರಸ್ತೆ ತಡೆ ನಡೆಸಿದ ರೈತರು, ತಮಟೆ ಬಾರಿಸುತ್ತಾ ಧರಣಿ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು. ಪ್ರತಿಭಟನೆಯಲ್ಲಿ ಹಿರಿಯ ಶಾಸಕ ಡಾ. ಎಚ್.ಕೆ. ಪಾಟೀಲ ಅವರು ಕೂಡ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ್ದ ಹೆಚ್.ಕೆ. ಪಾಟೀಲ ಅವರು, ಅಕ್ಟೋಬರ್ 10 ರೊಳಗೆ ಸಂಪೂರ್ಣ ಗದಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಮ್ಮದೇ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.
ಅಲ್ಲದೇ, ವಿಶೇಷ ಅಧಿವೇಶನದಲ್ಲೇ ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿಕೊಂಡು ಬರುವುದಾಗಿ ಅವರು ಹೇಳಿದ್ದರು. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ತಮ್ಮ ರಾಜೀನಾಮೆಯ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶವನ್ನು ಈ ಮೂಲಕ ನೀಡಿದ್ದರು.
ಎಚ್.ಕೆ. ಪಾಟೀಲ ಅವರ ಈ ರಾಜೀನಾಮೆ ಘೋಷಣೆಯ ಬೆನ್ನಲ್ಲೇ ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ರೈತರು ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಗದಗ, ರೋಣ ಮತ್ತು ಮುಂಡರಗಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ, ನೆರವು ಹಾಗೂ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.
ಹೆಚ್.ಕೆ. ಪಾಟೀಲ ಅವರ ರಾಜೀನಾಮೆ ಎಚ್ಚರಿಕೆ, ರೈತರ ಪ್ರತಿಭಟನೆ ಹಾಗೂ ಇದೀಗ ಜಿಲ್ಲಾ ಉಸ್ತುವಾರಿ ಸಚಿವರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ಮನವಿ—ಈ ಬೆಳವಣಿಗೆಗಳಿಂದ ಗದಗ ಜಿಲ್ಲೆಯ ಬರ ಪರಿಸ್ಥಿತಿ ರಾಜ್ಯ ಸರ್ಕಾರದ ಮಟ್ಟದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದೀಗ ಸಚಿವ ರಾಯರೆಡ್ಡಿ ಅವರ ಮನವಿಗೆ ಮುಖ್ಯಮಂತ್ರಿ ಹಾಗೂ ಸರ್ಕಾರ ಯಾವ ರೀತಿಯ ಸ್ಪಂದನೆ ನೀಡಲಿದೆ, ಮೂರು ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗುತ್ತದೆಯೇ ಹಾಗೂ ಸಂಪೂರ್ಣ ಗದಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
