ಗದಗ / ಬೆಂಗಳೂರು:
ಗುತ್ತಿಗೆದಾರನಿಂದ ಕಮಿಷನ್ ಪಡೆದ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
🖋ವರದಿ: ಮಹಲಿಂಗೇಶ ಹಿರೇಮಠ. ಗದಗ
ಫೆಬ್ರುವರಿ 21 ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ ಬಾಲಾಜಿ ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಗುತ್ತಿಗೆದಾರನಿಂದ 5 ಲಕ್ಷ ಕಮಿಷನ್ ಪಡೆದ ಆರೋಪದ ಹಿನ್ನೆಲೆಯಲ್ಲಿ ಶಾಸಕರನ್ನು ವಶಕ್ಕೆ ಪಡೆದು ಸತತ 11 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಬಳಿಕ ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಅವರನ್ನು ರಾತ್ರೋರಾತ್ರಿ ಬೆಂಗಳೂರಿಗೆ ಕರೆದೊಯ್ದು, ಮರುದಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣ ಸಂಬಂಧ ಶಾಸಕರ ಆಪ್ತ ಸಹಾಯಕರಾದ ಮಂಜುನಾಥ ವಾಲ್ಮೀಕಿ ಹಾಗೂ ಗುರು ಲಮಾಣಿ ಅವರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ನ್ಯಾಯಾಲಯವು ಶಾಸಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಿಂದ, ಡಾ. ಚಂದ್ರು ಲಮಾಣಿ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದ 18 ದಿನಗಳಿಂದ ಬಂಧನದಲ್ಲಿದ್ದರು.
ಆದರೆ ಇಂದು ನಡೆದ ವಿಚಾರಣೆ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕರಿಗೆ ಜಾಮೀನು ಮಂಜೂರು ಮಾಡಿದ್ದು, ಇದರಿಂದ 18 ದಿನಗಳ ಕಾಲ ಜೈಲಿನಲ್ಲಿದ್ದ ಶಾಸಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಇನ್ನೊಂದೆಡೆ, ಗುತ್ತಿಗೆದಾರರಿಂದ ಲಂಚ ಪಡೆದ ಆರೋಪದಡಿ,ಶಾಸಕರ ಇಬ್ಬರೂ ಆಪ್ತ ಸಹಾಯಕರಿಗೂ ಬೇಲ್ ಸಿಕ್ಕಿದೆ.
ಸದ್ಯ, ಚಂದ್ರು ಲಮಾಣಿಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಹರ್ಷ ಉಂಟು ಮಾಡಿದ್ದು, ಚಂದ್ರು ಲಮಾಣಿ ಅವರನ್ನ ಬರಮಾಡಿಕೊಳ್ಳಲು ಕಾತುರದಲ್ಲಿದ್ದಾರೆ.
ಇನ್ನು, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ವಿರುದ್ಧದ ಲೋಕಾಯುಕ್ತ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಟ್ಟಾರೆ. ಮುಂದಿನ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಮೇಲೆ ಎಲ್ಲರ ಗಮನ ನೆಟ್ಟಿದೆ.
