ಗದಗ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಿವಾದ ಎರಡು ಸಮುದಾಯಗಳ ನಡುವೆ ಭಾರೀ ಘರ್ಷಣೆಗೆ ತಿರುಗಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
ನೀರಿನ ವಿಚಾರಕ್ಕೆ ಆರಂಭವಾದ ಮಾತಿನ ಚಕಮಕಿ ನಂತರ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ನಡುವೆ ತೀವ್ರ ಗಲಾಟೆಗೆ ಕಾರಣವಾಗಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಲಾಗಿದೆ.
ಈ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಎಸ್‌ಸಿ ಸಮುದಾಯದ ವ್ಯಕ್ತಿಯೊಬ್ಬರು ಎಸ್‌ಟಿ ಸಮುದಾಯದ ರೈತನ ಜಮೀನಿನಲ್ಲಿದ್ದ ಬೋರ್ ವೆಲ್ ನ ನೀರು ಕುಡಿದ ವಿಚಾರಕ್ಕೆ ಗಲಾಟೆ ಶುರುವಾಗಿದೆ.ನಂತರ ಗ್ರಾಮಕ್ಕೆ ಮರಳಿದ ಬಳಿಕ, ಎರಡೂ ಸಮುದಾಯದ ಜನರು ಗುಂಪುಗೂಡಿ ಪರಸ್ಪರ ದಾಳಿ ನಡೆಸಿದ್ದಾರೆ.
ಘಟನೆ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಟ್ಟಿದ್ದಾರೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದೂರಿನ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಒಟ್ಟಾರೆ, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಈ ಗಲಾಟೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸರು ಮುಕ್ಕಾಂ ಹೂಡಿ ಪರಿಸ್ಥಿತಿ ಮೇಲೆ ನಿಗಾ ವಹಿಸಿ ಇಂದು ತಾಲೂಕಾಡಳಿತ ಗ್ರಾಮದಲ್ಲಿ ಠಿಕಾಣಿ ಹೂಡಿದ್ದು, ಶಾಂತಿ ಸಭೆಗೆ ಮುಂದಾಗಿದೆ.
